November 5, 2026
Thursday, November 5, 2026
spot_img

ಟನ್ ಕಬ್ಬಿಗೆ 6,000 ರೂ. ನೀಡುವಂತೆ ರೈತರ ಪಟ್ಟು: ಶೀಘ್ರ ಪರಿಹಾರದ ಭರವಸೆ ನೀಡಿದ ಸಚಿವ ರುದ್ರಪ್ಪ ಲಮಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ. ರೈತರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳನ್ನೂ ಪರಿಗಣಿಸಿ, ಎಲ್ಲರಿಗೂ ಒಪ್ಪಿಗೆಯಾಗುವ ನಿರ್ಧಾರ ಕೈಗೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಸಕ್ಕರೆ ಹಾಗೂ ಜವಳಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮಾತನಾಡಿದ ಅವರು, ರೈತರ ಹಿತಾಸಕ್ತಿ ಸರ್ಕಾರದ ಮೊದಲ ಆದ್ಯತೆ ಎಂದರು.

ಕಳೆದ ಹತ್ತು ವರ್ಷಗಳಿಂದ ಸಕ್ಕರೆ ಬೆಲೆಯಲ್ಲಿ ಏರಿಕೆಯಾಗದ ಹಿನ್ನೆಲೆಯಲ್ಲಿ ರೈತರು ಪ್ರತಿ ಟನ್ ಕಬ್ಬಿಗೆ 6,000 ಬೆಲೆ ನಿಗದಿಪಡಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಶೀಘ್ರದಲ್ಲೇ ಸೂಕ್ತ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:

ರೈತರು ಮತ್ತು ಕಾರ್ಖಾನೆ ಮಾಲೀಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸರ್ವಸಮ್ಮತ ಪರಿಹಾರ ಕಂಡುಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ. ಪ್ರತಿಭಟನೆ ವೇಳೆ ಯಾರೂ ಅಹಿತಕರ ಘಟನೆಗಳಲ್ಲಿ ತೊಡಗಿಸಿಕೊಳ್ಳದೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಹಲವು ಸಚಿವರು, ಶಾಸಕರು, ಸಂಸದರು, ರೈತ ಮುಖಂಡರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ಇಲಾಖೆಯ ಪ್ರತಿನಿಧಿಗಳು ಭಾಗವಹಿಸಿ ಸಮಸ್ಯೆಗಳ ಕುರಿತು ಚರ್ಚಿಸಿದರು.

Must Read